ಬೆಂಗಳೂರು, ನವೆಂಬರ್ 3: ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಅದರಲ್ಲೂ ಬೆಂಗಳೂರು ಮೂಲಕ ಬೇರೆ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ಸಂಚರಿಸುವ ಭಾರಿ ವಾಹನಗಳಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಕಡಿವಾಣ ಹಾಕಲು ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಾಗಿಸುವ ಟ್ಯಾಂಕರ್‌ಗಳ ಸಂಚಾರಕ್ಕೆ ಹೊಸ ನಿಯಮ ಜಾರಿಗೊಳಿಸಿದ್ದು, ನಗರದ ಮೂಲಕ ಹಾದುಹೋಗುವ ಹೊರಜಿಲ್ಲೆಗಳ ಟ್ಯಾಂಕರ್‌ಗಳಿಗೆ ನಿರ್ಬಂಧ ವಿಧಿಸಲಾಗಿದೆ.
ದೇವರಗುಂದಿಯಿಂದ ಪ್ರತಿದಿನ 1,000 ಟ್ಯಾಂಕರ್‌ಗಳ ಸಂಚಾರ!
2014ರಲ್ಲೇ ಬೆಂಗಳೂರಿನಲ್ಲಿ ಬೆಳಗಿನ ವೇಳೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯಂತಹ ಅಗತ್ಯ ಸೇವೆಗಳ ವಾಹನಗಳಿಗೆ ದಿನದ 24 ಗಂಟೆಯೂ ಸಂಚರಿಸಲು ವಿನಾಯಿತಿ ನೀಡಲಾಗಿತ್ತು. ಇದೀಗ ಈ ವಿನಾಯಿತಿಯನ್ನೇ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದಾಗ, ನಗರದ ಮೂಲಕ ಪ್ರತಿದಿನ ನೂರಾರು ಟ್ಯಾಂಕರ್‌ಗಳು ಸಂಚರಿಸುತ್ತಿರುವುದು ಬೆಳಕಿಗೆ ಬಂದಿದೆ. ಹೊಸಕೋಟೆ ತಾಲೂಕಿನ ದೇವರಗುಂದಿಯಿಂದ ಪ್ರತಿದಿನ ಸುಮಾರು 800ರಿಂದ 1,000 ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಟ್ಯಾಂಕರ್‌ಗಳು ವಿವಿಧ ಜಿಲ್ಲೆಗಳಿಗೆ ತೆರಳುತ್ತಿವೆ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಹೊರಜಿಲ್ಲೆಗಳಿಗೆ ತೆರಳುವ ಇಂತಹ ಟ್ಯಾಂಕರ್‌ಗಳಿಗೆ ನಗರದ ಪ್ರವೇಶ ನಿರ್ಬಂಧಿಸಲಾಗಿದೆ.
ನೈಸ್ ರಸ್ತೆ, ರಿಂಗ್ ರೋಡ್ ಮೂಲಕ ಸಂಚಾರಕ್ಕೆ ಸೂಚನೆ
ಹೊಸ ನಿಯಮದ ಪ್ರಕಾರ, ಬೆಂಗಳೂರಿನ ಪೆಟ್ರೋಲ್ ಬಂಕ್‌ಗಳು ಹಾಗೂ ಗ್ಯಾಸ್ ವಿತರಣಾ ಕೇಂದ್ರಗಳಿಗೆ ಇಂಧನ ಪೂರೈಸುವ ಟ್ಯಾಂಕರ್‌ಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಬೇರೆ ಜಿಲ್ಲೆಗಳು ಮತ್ತು ಹೊರರಾಜ್ಯಗಳಿಗೆ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಪೂರೈಸುವ ಟ್ಯಾಂಕರ್‌ಗಳು ಇನ್ನು ಮುಂದೆ ನಗರದೊಳಗೆ ಪ್ರವೇಶಿಸುವಂತಿಲ್ಲ. ಅಂತಹ ವಾಹನಗಳು NICE ರಸ್ತೆ ಮತ್ತು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಮೂಲಕ ತಮ್ಮ ಗಮ್ಯಸ್ಥಾನ ತಲುಪುವಂತೆ ಸೂಚಿಸಲಾಗಿದೆ.
ಈ ಕ್ರಮದಿಂದ ನಗರದ ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಭಾರಿ ವಾಹನಗಳ ಒತ್ತಡ ಕಡಿಮೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ತುಮಕೂರು ರಸ್ತೆ, ಮೈಸೂರು ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಸುಗಮವಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ, ಹೊರಜಿಲ್ಲೆಗಳ ಟ್ಯಾಂಕರ್‌ಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಈ ಹೊಸ ನಿಯಮ ಎಷ್ಟರಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

