ಬಳ್ಳಾರಿ, ನವೆಂಬರ್ 4: ಗಣಿನಾಡು ಬಳ್ಳಾರಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ನಗರದೊಳಗೆ ಭಾರೀ ಗಾತ್ರದ ವಾಹನಗಳು ಹಾಗೂ ಲಾರಿಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಅದರಲ್ಲೂ ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಲಾರಿ ಅಪಘಾತದಲ್ಲಿ ಮೃತಪಟ್ಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಬಳಿ ಮೂರು ದಿನಗಳ ಹಿಂದೆ 23 ವರ್ಷದ ಅಬೂ ಎಂಬ ಯುವಕ ಲಾರಿ ಅಡಿಗೆ ಸಿಲುಕಿ ಮೃತಪಟ್ಟಿದ್ದರು. ಇದೀಗ ಈದ್ಗಾ ಸಮೀಪ 28 ವರ್ಷದ ಇಮ್ರಾನ್ ಎಂಬ ಯುವಕ ಲಾರಿ ಅಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ನಗರದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಇಂತಹ ಅಪಘಾತಗಳಿಂದ ಸಾರ್ವಜನಿಕರು ಆತಂಕಗೊಂಡಿದ್ದು, ನಗರದೊಳಗೆ ಲಾರಿ ಹಾಗೂ ಇತರ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಕ್ಕೆ ಸಾರ್ವಜನಿಕರ ಆಗ್ರಹ

ಕಳೆದ ಮೂರು ತಿಂಗಳ ಅವಧಿಯಲ್ಲಿ ಬಳ್ಳಾರಿ ನಗರದಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ನಗರದೊಳಗೆ ಹೆಚ್ಚುತ್ತಿರುವ ಭಾರೀ ವಾಹನಗಳ ಸಂಚಾರದಿಂದ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಅಪಾಯ ಎದುರಿಸುತ್ತಿದ್ದಾರೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ನಗರ ವ್ಯಾಪ್ತಿಯಲ್ಲಿ ಲಾರಿಗಳ ಅನಿಯಂತ್ರಿತ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಆರೋಪ

ಬಳ್ಳಾರಿ ನಗರದೊಳಗೆ ಗಣಿಗಾರಿಕೆ ಲಾರಿಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿಂದೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಲಾರಿ ಸೇರಿದಂತೆ ಭಾರೀ ಗಾತ್ರದ ವಾಹನಗಳು ನಗರದೊಳಗೆ ಸಂಚರಿಸದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು ಎಂದು ತಿಳಿದುಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಆದೇಶವನ್ನು ಉಲ್ಲಂಘಿಸಿ ಭಾರೀ ವಾಹನಗಳು ನಗರದಲ್ಲಿ ಸಂಚರಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ಮತ್ತೆ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂಬ ಆದೇಶವನ್ನು ಪುನರುಚ್ಚರಿಸಿದೆ.
LIVE TV

ಒಟ್ಟಿನಲ್ಲಿ, ಬಳ್ಳಾರಿ ನಗರದಲ್ಲಿ ಭಾರೀ ವಾಹನಗಳ ಸಂಚಾರದಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಎಷ್ಟು ಕಟ್ಟುನಿಟ್ಟಾಗಿ ನಿಯಮ ಜಾರಿಗೊಳಿಸುತ್ತದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ