ಬೆಂಗಳೂರು, ನವೆಂಬರ್ 5: ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ
ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ನವೆಂಬರ್ 6ರವರೆಗೆ ಗಾಳಿ, ಗುಡುಗು ಎಚ್ಚರಿಕೆ
ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?
ಬುಧವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 7 ಸೆಂ.ಮೀ, ಮೈಸೂರು ಜಿಲ್ಲೆಯ ಸರಗೂರು ಮತ್ತು ಮಿರ್ಲೆಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ಎಚ್.ಡಿ.ಕೋಟೆಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಇದಲ್ಲದೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ 4 ಸೆಂ.ಮೀ ಹಾಗೂ ಮೈಸೂರು ಪಿಟಿಒ ಪ್ರದೇಶದಲ್ಲಿ 4 ಸೆಂ.ಮೀ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ ಮತ್ತು ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.
LIVE TV
ರಾಜ್ಯದ ಬಯಲು ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

