ಬೆಂಗಳೂರು: ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿವಾರು ಸಮೀಕ್ಷೆ) ತಕ್ಷಣ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿ ಸೇರಿದಂತೆ ಸಚಿವರ ನಿವಾಸಗಳಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ ನೀಡಿದೆ.
ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ನೇತೃತ್ವದ ನಿಯೋಗವು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದೆ.
‘ನೀವು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಎಚ್. ಕಾಂತರಾಜ ನೇತೃತ್ವದಲ್ಲಿ ಆಯೋಗ ರಚಿಸಿ, ₹ 165 ಕೋಟಿ ವೆಚ್ಚದಲ್ಲಿ ಸಮೀಕ್ಷೆ ನಡೆಸಿದ್ದೀರಿ. ವರದಿ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿತ್ತು. ಹೀಗಾಗಿ, ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಮಧುಸೂದನ್ ನಾಯಕ್ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ಆಯೋಗ ರಚಿಸಿ, ಹಳೆ ವರದಿಯ ಶಿಫಾರಸುಗಳನ್ನು ಒಳಗೊಂಡಂತೆ ಮರು ಸಮೀಕ್ಷೆ ನಡೆಸಿ 90 ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದ್ದೀರಿ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ವರದಿ ಸ್ವೀಕರಿಸಿ ಬದ್ಧತೆ ಮೆರೆದಿದ್ದೀರಿ. ಆದರೆ, ಇದುವರೆಗೆ ವರದಿ ಜಾರಿಯಾಗಿಲ್ಲ. ತೊಡಕುಗಳನ್ನು ನಿವಾರಿಸಿ ಕೂಡಲೇ ವರದಿ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮನವಿಯಲ್ಲಿ ನಿಯೋಗ ಹೇಳಿದೆ.
‘2024ರ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಜಾತಿ ಗಣತಿ ಘೋಷಣೆ ಮಾಡಿದ್ದರು. ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ನೀಡಿದ ಆಶ್ವಾಸನೆಯಂತೆ ಸಮೀಕ್ಷಾ ವರದಿಯನ್ನು ಶೀಘ್ರವಾಗಿ ಬಿಡುಗಡೆಗೊಳಿಸಬೇಕು. ಸಚಿವ ಸಂಪುಟದಲ್ಲಿ ಮಂಡಿಸಿ ಅನುಷ್ಠಾನಗೊಳಿಸಬೇಕು’ ಎಂದೂ ಆಗ್ರಹಿಸಿದೆ.
261105-51-877681510

