ಬೆಂಗಳೂರು, ನವೆಂಬರ್ 6: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು (ನ.6) ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಕರಾವಳಿ ಕರ್ನಾಟಕದ ಕೆಲವೆಡೆ ಗುಡುಗು-ಮಿಂಚಿನ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಕರಾವಳಿಯ ಎರಡು ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಇಂದು ಕರಾವಳಿ ಕರ್ನಾಟಕದ ಕೆಲವೆಡೆ ಗುಡುಗು-ಮಿಂಚಿನ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲವೆಡೆ ನವೆಂಬರ್ 7ರವರೆಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಒಣಹವೆ
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ ಎಲ್ಲಿ ಎಷ್ಟು ಮಳೆ?
ಗುರುವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಮುಖ್ಯವಾಗಿ ಒಣಹವೆ ಕಂಡುಬಂದಿದೆ. ರಾಮನಗರ, ಬೆಂಗಳೂರು ನಗರದ ಎಚ್ಎಎಲ್ ವಿಮಾನ ನಿಲ್ದಾಣ ವೀಕ್ಷಣಾಲಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಂ.ಮೀ. ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಚಿಕ್ಕಮಗಳೂರು ಜಿಲ್ಲೆಯ ಕಳಸ ಹಾಗೂ ಬೆಂಗಳೂರು ನಗರ ವೀಕ್ಷಣಾಲಯದಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ.
ಇದನ್ನೂ ಓದಿ: ಸೈಕ್ಲೋನ್, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ನಿಖರ ಮುನ್ಸೂಚನೆ ಹೇಗೆ ಸಾಧ್ಯ?: ಐಎಂಡಿ ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ
ಇನ್ನು ರಾಜ್ಯದ ಬಯಲು ಪ್ರದೇಶಗಳಲ್ಲಿ ಧಾರವಾಡದಲ್ಲಿ ಕನಿಷ್ಠ 17.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

