ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಸಾರಿಗೆ ಸಂಪರ್ಕದ ಜೀವನಾಡಿಯಾಗಿರುವ 'ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ'ಗೆ (NWKRTC) 'ಕಿತ್ತೂರು ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ' ಎಂದು ಮರುನಾಮಕರಣ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಅಕ್ಟೋಬರ್ 29ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದೊರೆತ ಅನುಮೋದನೆಯನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ.

ವಾಯುವ್ಯ ಸಾರಿಗೆ ಸಂಸ್ಥೆಯು ಆಧುನಿಕ ಸೌಲಭ್ಯಗಳೊಂದಿಗೆ ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ನೀಡುತ್ತಿದ್ದು, ನಗರ ಮತ್ತು ಗ್ರಾಮೀಣ ಭಾಗಗಳಿಗೆ ಯಶಸ್ವಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಗೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರನ್ನಿಡಬೇಕೆಂದು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕೋರಿದ್ದರು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಮರುನಾಮಕರಣದ ನಿರ್ಧಾರ ತಳೆದಿದೆ.