ಬೆಂಗಳೂರು, ನವೆಂಬರ್ 7: ಬೆಂಗಳೂರಿನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿ ರಸ್ತೆಯಲ್ಲಿ ಬಹುನಿರೀಕ್ಷಿತ ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಆರಂಭವಾಗಿದೆ. ಹೆಬ್ಬಾಳ ಮತ್ತು ಮೆಖ್ರಿ ಸರ್ಕಲ್ ನಡುವಿನ ಯುಎಎಸ್ ಸ್ಟಾಫ್ ಕ್ವಾಟ್ರಸ್‌ನಿಂದ ಮೆಖ್ರಿ ಸರ್ಕಲ್ ವರೆಗೆ ಬಿಡಿಎ ವತಿಯಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ನವೆಂಬರ್ 6ರಿಂದ ಆರಂಭವಾಗಿರುವ ಈ ಕಾಮಗಾರಿಯು ಮುಂದಿನ 18 ತಿಂಗಳ ಕಾಲ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆ ಸರ್ವೀಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕಿದೆ. ನಿರ್ಮಾಣ ಕಾರ್ಯದಿಂದಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ಹಾಗೂ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ. ಕಾರುಗಳು, ದ್ವಿಚಕ್ರ ವಾಹನಗಳು ಮತ್ತು ಆಟೋರಿಕ್ಷಾಗಳಂತಹ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರಲಿದೆ.

ಟ್ರಾಫಿಕ್ ಪೊಲೀಸರು ಈಗಾಗಲೇ ಪರ್ಯಾಯ ಮಾರ್ಗಗಳ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ. ವಿಮಾನ ನಿಲ್ದಾಣದಿಂದ ನಗರದ ಕಡೆಗೆ ಬರುವ ವಾಹನಗಳು ಮತ್ತು ಯಶವಂತಪುರದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಸೂಚಿತ ಪರ್ಯಾಯ ಮಾರ್ಗಗಳನ್ನು ಬಳಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ