ಬೆಂಗಳೂರು: ‘ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನವಾದ ನವೆಂಬರ್ 7ಅನ್ನು ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ದಿನವನ್ನಾಗಿ ಘೋಷಿಸಿ, ಆಚರಿಸಬೇಕು’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಸಿ.ಶಿವರಾಜು ಆಗ್ರಹಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಕೇಂದ್ರ ಗ್ರಂಥಾಲಯ ಆಯೋಜಿಸಿದ್ದ ವಿದ್ಯಾರ್ಥಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಶಿಕ್ಷಣವು ಮಾನವ ಜೀವನವನ್ನು ಬದಲಾಯಿಸುವ ಅತ್ಯಂತ ಶಕ್ತಿಶಾಲಿ ಸಾಧನ ಎಂಬ ಸಂದೇಶವನ್ನು ಅಂಬೇಡ್ಕರ್ ಸಾರಿದ್ದಾರೆ. ಶಿಕ್ಷಣದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯ ಎಂಬುದನ್ನು ಜೀವನದ ಮೂಲಕ ತೋರಿಸಿಕೊಟ್ಟಿದ್ದಾರೆ. ಅತ್ಯಧಿಕ ಪದವಿಗಳನ್ನು ಪಡೆದ ಅಂಬೇಡ್ಕರ್ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೂ ಮಾದರಿ ಹಾಗೂ ಸ್ಫೂರ್ತಿ’ ಎಂದು ವಿವರಿಸಿದರು.

ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನವೆಂಬರ್ 7ಅನ್ನು ವಿದ್ಯಾರ್ಥಿ ದಿನವನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ದಿನಾಚರಣೆ ಆರಂಭವಾಗಿರುವುದು ಹೊಸ ಪರ್ವಕ್ಕೆ ನಾಂದಿಯಾಗಿದ್ದು, ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅಧ್ಯಯನ ಮತ್ತು ಸಂಶೋಧನೆಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕ ರಘುನಂದನ್ ಮಾತನಾಡಿ, ‘ವಿದ್ಯಾರ್ಥಿಗಳ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವುದರ ಜೊತೆಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ದಿನಾಚರಣೆ ವೇದಿಕೆಯಾಗಲಿದೆ. ರಾಜ್ಯದಾದ್ಯಂತ ವಿದ್ಯಾರ್ಥಿ ದಿನಾಚರಣೆ ಆಚರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಕುಲಸಚಿವರು (ಮೌಲ್ಯಮಾಪನ) ಆರ್. ಶಿವಪ್ಪ, ಸಿಂಡಿಕೇಟ್ ಸದಸ್ಯರಾದ ಬಿ.ಡಿ. ಗಂಗರಾಜು ಮತ್ತು ಲೋಕೇಶ್ ರಾಮ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕೋಶದ ವಿಶೇಷಾಧಿಕಾರಿ ಜಿ.ಕೃಷ್ಣಮೂರ್ತಿ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಶ್ರೀನಿವಾಸ್‌ ಉಪಸ್ಥಿತರಿದ್ದರು.

261108-4-814261625