ಹಾಸನ: ‘ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಬೇರೆಯವರ ಅನುಮತಿ ಕೇಳುವ ಅಗತ್ಯ ನಮಗಿಲ್ಲ. ಸುಪ್ರೀಂ ಕೋರ್ಟ್ ಈಗಾಗಲೇ ಈ ಸಂಬಂಧ ಅನುಮತಿ ನೀಡಿದ್ದು, ಕಾನೂನುಬದ್ಧವಾಗಿ ತನ್ನ ವ್ಯಾಪ್ತಿ ಪ್ರದೇಶದಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಅರ್ಹವಾಗಿದೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಧಿಸಿರುವ ಷರತ್ತಿನಂತೆ ತಮಿಳುನಾಡಿಗೆ 177 ಟಿಎಂಸಿ ಅಡಿ ನೀರು ನೀಡಬೇಕಿದೆ. ಮೇಕೆದಾಟು ಜಲಾಶಯ ನಿರ್ಮಾಣದಿಂದ ತಮಿಳುನಾಡಿಗೂ ಹೆಚ್ಚಿನ ಅನುಕೂಲವಾಗಲಿದೆ. ಇದು ಕಾವೇರಿ ನೀರಿನ ಸಮತೋಲಿತ ನಿರ್ವಹಣೆಗೆ ನೆರವಾಗುವ ಜಲಾಶಯವಾಗಿದೆ’ ಎಂದರು.
ಯೋಜನೆಗಾಗಿ ಅರಣ್ಯ ಪ್ರದೇಶ ಬಳಕೆಯಾಗುತ್ತಿದ್ದು ಅದಕ್ಕೆ ಪರ್ಯಾಯವಾಗಿ ರಾಜ್ಯದ ಇತರೆ ಭಾಗಗಳಲ್ಲಿ ಸುಮಾರು 5 ಸಾವಿರ ಹೆಕ್ಟೇರ್ ಅರಣ್ಯ ಭೂಮಿ ಗುರುತಿಸಲಾಗಿದೆ. ಈ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪೂರ್ಣಗೊಂಡ ಕೂಡಲೇ ಅಗತ್ಯ ಪ್ರಸ್ತಾವ ಸಲ್ಲಿಸಲಾಗುವುದು. ಬಳಿಕ ಕೇಂದ್ರ ಜಲ ಆಯೋಗ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
‘ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ನಿಲುವಿಗೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ಹಾಗೂ ಎನ್ಡಿಎ ನಾಯಕರೂ ರಾಜ್ಯದ ಪರ ನಿಲ್ಲುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಈ ವಿಚಾರದಲ್ಲಿ ತಮ್ಮ ಅಧಿಕಾರಿಗಳ ತಂಡವನ್ನು ಕಳುಹಿಸಿ ಕೊಡಬೇಕು. ಯಾವುದೇ ಕಾರಣಕ್ಕೂ ನಾವು ನೀರನ್ನು ದುರುಪಯೋಗ ಮಾಡಿಕೊಳ್ಳುವುದಿಲ್ಲ. ಮಾತಿಗೆ ಬದ್ಧರಾಗಿರುತ್ತೇವೆ’ ಎಂದು ಭರವಸೆ ನೀಡಿದರು.
ಕಾವೇರಿ ವಿಚಾರದಲ್ಲಿ ಇನ್ನು ಮುಂದೆ ಸಂಘರ್ಷಕ್ಕೆ ಅವಕಾಶ ನೀಡಬಾರದು. ಹೋರಾಟದ ದಿನಗಳು ಮುಗಿದಿವೆ. ಸುಪ್ರೀಂ ಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಿ, ಕಾನೂನಿನ ಚೌಕಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ನೀರನ್ನು ಹಂಚಿಕೊಳ್ಳುವುದರ ಜೊತೆಗೆ ಪರಸ್ಪರ ಸೌಹಾರ್ದ ಮತ್ತು ಒಗ್ಗಟ್ಟನ್ನು ಕಾಪಾಡಿಕೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿಗೆ ಮನವಿ ಮಾಡಿದರು.
ದೇವಸ್ಥಾನಗಳಿಗೆ ಭೇಟಿ:
ಪತ್ನಿ ಉಷಾ ಅವರೊಂದಿಗೆ ಹಾಸನದ ಹಾಸನಾಂಬ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಾಲ್ಲೂಕಿನ ಬೀಕನಹಳ್ಳಿ ಸಮೀಪದ ಪುರದಮ್ಮ ದೇವಾಲಯದಲ್ಲೂ ವಿಶೇಷ ಪೂಜೆ ಸಲ್ಲಿಸಿದರು.
ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವಸ್ತುಪ್ರದರ್ಶನ ಮೈದಾನದಲ್ಲಿ ಆಯೋಜಿಸಿದ್ದ ಕುಸ್ತಿ, ವಾಲಿಬಾಲ್ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಹಾಗೂ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿದರು.

