ಬೆಂಗಳೂರು: ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಹಾಗೂ ಸುಧಾರಣೆಗಳನ್ನು ತರುವ ಕುರಿತು ಶಿಫಾರಸು ಮಾಡಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.

ವಿಶ್ವವಿದ್ಯಾಲಯಗಳ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಿರುವ ಸಮಿತಿ, ಇದೇ ತಿಂಗಳ ಅಂತ್ಯದ ಒಳಗೆ ಏಕರೂಪ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

ಒಂದೊಂದು ವಿಶ್ವವಿದ್ಯಾಲಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳು ಇವೆ. ಸಿಬ್ಬಂದಿ ಕೊರತೆ, ಆರ್ಥಿಕ ಮುಗ್ಗಟ್ಟು, ಜಾಗದ ಒತ್ತುವರಿ, ಪರೀಕ್ಷಾ ವ್ಯವಸ್ಥೆ ಇತ್ಯಾದಿಗಳ ಬಗ್ಗೆ ವಿಶ್ವವಿದ್ಯಾಲಯಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಸಮಿತಿಯು ಎಲ್ಲ ವಿಶ್ವವಿದ್ಯಾಲಯಗಳಿಂದ ವರದಿ ಪಡೆದ ನಂತರ ಉನ್ನತ ಶಿಕ್ಷಣ ಪರಿಷತ್‌ಗೆ ಸಲ್ಲಿಸಲಿದೆ. ಅದನ್ನು ಆಧರಿಸಿ ವಿಶ್ವವಿದ್ಯಾಲಯಗಳ ಸುಧಾರಣೆ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ವಿಶ್ವವಿದ್ಯಾಲಯಗಳಲ್ಲಿ ಬಹುತೇಕ ಹುದ್ದೆಗಳು ಖಾಲಿ ಇವೆ. ಆದರೆ, ಒಂದು ಸಾವಿರ ಹುದ್ದೆಗಳನ್ನು ಅಷ್ಟೇ ಭರ್ತಿ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಇವುಗಳನ್ನು ವಿಶ್ವವಿದ್ಯಾಲಯಗಳಿಗೆ ಹಂಚಿಕೆ ಮಾಡಲು ಅನುಸರಿಸಬೇಕಾದ ಮಾನದಂಡದ ಬಗ್ಗೆಯೂ ಚರ್ಚೆ ಆಗುತ್ತಿದೆ. ಹೀಗಾಗಿ ಯಾವ ವಿಶ್ವವಿದ್ಯಾಲಯದಲ್ಲಿ ಎಷ್ಟು ಕೋರ್ಸ್‌ಗಳಿವೆ, ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ ಎಂಬ ಮಾಹಿತಿ ತರಿಸಿಕೊಳ್ಳಲಾಗುವುದು. ಅದರ ಆಧಾರದ ಮೇಲೆ ಭರ್ತಿ ಮಾಡಬೇಕಾದ ಹುದ್ದೆಗಳ ಸಂಖ್ಯೆಯನ್ನು ನಿರ್ಧರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

261110-19-1177305607