ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳದಿದ್ದರೆ ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿಯ ಆಯ್ಕೆಯ ಸಾಧ್ಯತೆ ಎದುರಾಗಲಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ನಾಲ್ಕು ತಿಂಗಳೂ ಕಳೆದಿಲ್ಲ. ಆಗಲೇ ಡಿ ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ. ದೆಹಲಿ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು, ಏನೇ ಮಾಡಿಯಾದರೂ ಸರಿ, ಸಿದ್ದರಾಮಯ್ಯ ಅವರ ಕೈಕಾಲು ಹಿಡಿದಾದರೂ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
HDK, ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ: ಸಿಎಂ ಡಿಕೆ ಶಿವಕುಮಾರ್ದೆಹಲಿಯಿಂದ ಹಿಂದಿರುಗಿದ ಬಳಿಕ ಡಿ ಕೆ ಶಿವಕುಮಾರ್ ನೇರವಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಸಂಬಂಧ ಉತ್ತಮವಾಗಿದೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಈ ಸಂಬಂಧ ಶೀಘ್ರದಲ್ಲೇ ಪರೀಕ್ಷೆಗೆ ಒಳಗಾಗಲಿದೆ. ಶಾಸಕರಿಗೆ ಯಾವುದೇ ಅನುದಾನ ಸಿಗದ ಕಾರಣ ಕಾಂಗ್ರೆಸ್ನಲ್ಲೇ ಮುಖ್ಯಮಂತ್ರಿಯ ಬಗ್ಗೆ ವಿಶ್ವಾಸವಿಲ್ಲ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.
ಡಿ ಕೆ ಶಿವಕುಮಾರ್ ಅವರು ಹಲವು ಬಾರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕವೂ, ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಬ್ಬರೂ ಪ್ರತ್ಯೇಕವಾಗಿ ಮೈಸೂರಿಗೆ ಪ್ರಯಾಣಿಸಿದ್ದೇಕೆ, ಡಿ ಕೆ ಶಿವಕುಮಾರ್ ವಿಶೇಷ ವಿಮಾನದಲ್ಲಿ ತೆರಳಿದರೆ, ಸಿದ್ದರಾಮಯ್ಯ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದರು. ಇಬ್ಬರ ನಡುವಿನ ಬಿರುಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

