ದೇವನಹಳ್ಳಿ: ಒಳಮೀಸಲಾತಿಗಾಗಿ 40 ವರ್ಷದಿಂದ ನಡೆದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಮೀಸಲಾತಿ ಹಂಚಿಕೆ ವಿಚಾರದಲ್ಲಿ ಸಮುದಾಯಗಳ ನಡುವೆ ಇದ್ದ ಭಿನ್ನಾಭಿಪ್ರಾಯ ಬಗೆಹರಿದಿದೆ. ಇನ್ನು ಮುಂದೆ ಅಣ್ಣ, ತಮ್ಮಂದಿರಂತೆ ಒಗ್ಗಟ್ಟಿನಿಂದ ಸಾಗುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಜಾಲಿಗೆ ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಂಘ ಸ್ಥಾಪಿಸಿರುವ ಏಳು ಅಡಿ ಎತ್ತರದ ಬಿ.ಆರ್. ಅಂಬೇಡ್ಕರ್ ಹಾಗೂ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗಳನ್ನು ಶನಿವಾರ ಅನಾವರಣಗೊಳಿಸಿ ಮಾತನಾಡಿದರು.
‘ಒಳಮೀಸಲಾತಿ ಜಾರಿಗಾಗಿ ಅನೇಕ ವರ್ಷಗಳಿಂದ ಹೋರಾಟ ನಡೆಸಲಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆಗೆ ನ್ಯಾಯ ದೊರೆತಿದೆ. ಮೀಸಲಾತಿ ಹಂಚಿಕೆಯ ವಿಚಾರದಲ್ಲಿ ಅಣ್ಣತಮ್ಮಂದಿರ ನಡುವೆ ಉಂಟಾಗುವಂತಹ ಭಿನ್ನಾಭಿಪ್ರಾಯಗಳಿದ್ದವು. ಈಗ ಅವುಗಳನ್ನು ಬಗೆಹರಿಸಿಕೊಂಡಿದ್ದೇವೆ. ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ವೈಮನಸ್ಸು ಬೆಳೆಸಿಕೊಳ್ಳದೆ ಎಲ್ಲರೂ ಪ್ರೀತಿ, ವಿಶ್ವಾಸದಿಂದ ಬದುಕಬೇಕು’ ಎಂದು ತಿಳಿಸಿದರು.
ಬಿ.ಆರ್. ಅಂಬೇಡ್ಕರ್ ರಚನಾ ಸಮಿತಿಯ ಅಧ್ಯಕ್ಷರಾಗಿ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಜಾತಿ, ಧರ್ಮ ಹಾಗೂ ವರ್ಗಗಳ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿರುವ ಸಂವಿಧಾನವೇ ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ. ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಕೊಡುಗೆಯೂ ಅಪಾರವಾಗಿದೆ
ಎಂದರು.
‘ಜಾಲಿಗೆಯಲ್ಲಿ ಇಬ್ಬರು ಮಹನೀಯರ ಪ್ರತಿಮೆಯನ್ನು ಒಂದೇ ಕಡೆ ಪ್ರತಿಷ್ಠಾಪಿಸಿರುವುದು ಸಮಾಜದ ಒಗ್ಗಟ್ಟಿಗೆ ಉತ್ತಮ ಸಂದೇಶ ನೀಡಿದೆ. ಅವರ ವಿಚಾರಧಾರೆಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಬಯಪ ಮಾಜಿ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ಜಾಲಿಗೆ ಮುನಿರಾಜು, ಬುಳ್ಳಹಳ್ಳಿ ರಾಜಪ್ಪ ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.
ಸಮಗ್ರ ಅಭಿವೃದ್ಧಿಗೆ ಸಂಕಲ್ಪ
‘ದೇವನಹಳ್ಳಿ ತಾಲ್ಲೂಕಿನಲ್ಲಿ ರಸ್ತೆ, ಚರಂಡಿ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಉಳಿದಿರುವ ಕೆಲಸಗಳನ್ನೂ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನನ್ನ ಸಂಕಲ್ಪ’ ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

