ಕುದೂರು (ಮಾಗಡಿ): ತಾಲ್ಲೂಕಿನ ಸೋಲೂರು ಹೋಬಳಿಯ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿ– 75ರಲ್ಲಿ ಮಂಗಳವಾರ ಬೆಳಿಗ್ಗೆ ಕಾಲೇಜು ವಿದ್ಯಾರ್ಥಿಗಳಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬೆಂಗಳೂರಿನ ಸಪ್ತಗಿರಿ ಕಾಲೇಜಿನ ವೈಷ್ಣವಿ (20) ಹಾಗೂ ಜಾಹ್ನವಿ (20) ಎಂದು ಗುರುತಿಸಲಾಗಿದೆ.
ಕಾಲೇಜಿನ ಪ್ರಾಜೆಕ್ಟ್ ಕೆಲಸದದ ನಿಮಿತ್ತ ವಿದ್ಯಾರ್ಥಿಗಳು ಕಾರಿನಲ್ಲಿ ಕುಣಿಗಲ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ವೈಷ್ಣವಿ ಮತ್ತು ಜಾಹ್ನವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಉಳಿದ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಕ್ಕೆಳೆದು ಸಮೀಪದ ನೆಲಮಂಗಲ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಕುದೂರು ಠಾಣೆ ಪೊಲೀಸರು ತಿಳಿಸಿದರು.

