ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಹಾಜರಾದ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿದಂತಹ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪರೀಕ್ಷೆಗಳನ್ನು ಸಮರ್ಪಕವಾಗಿ ನಡೆಸಲು ಏಕರೂಪ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು’ ಎಂದು ಹೈಕೋರ್ಟ್‌, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದೆ.

‘ಸಿಇಟಿ ನಿರ್ವಹಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿನ ದೈಹಿಕ ತಪಾಸಣೆಗೆ ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು’ ಎಂದು ಕೋರಿ ‘ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ’ ಅಧ್ಯಕ್ಷ ಎಸ್‌. ರಘುನಾಥ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್‌ ನೇತೃತ್ವದ ದ್ವಿಸದಸ್ಯ ನ್ಯಾಯಪೀಠ ವಿಲೇವಾರಿ ಮಾಡಿದೆ.

‘ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು’ ಎಂಬ ಕೆಇಎ ಪರ ವಕೀಲರು ನೀಡಿದ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಈ ದಿಸೆಯಲ್ಲಿ ಪರೀಕ್ಷೆಯ ಹೊಣೆ ಹೊತ್ತ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನ ನೀಡಬೇಕು‘ ಎಂದು ಕೆಇಎ ಗೆ ಆದೇಶಿಸಿದೆ.

‘ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಕೆಇಎ ಯಾವುದೇ ಸೂಚನೆ ಅಥವಾ ಮಾರ್ಗಸೂಚಿ ನೀಡಿಲ್ಲ. ಇಂತಹ ಘಟನೆಗಳು ವರದಿಯಾದ ಕಡೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಅವು ಮರುಕಳಿಸದಂತೆ ಜಿಲ್ಲಾಧಿಕಾರಿಗಳು ಹಾಗೂ ಪರೀಕ್ಷಾ ನಿರ್ವಹಣೆಯಲ್ಲಿ ತೊಡಗಿರುವ ಎಲ್ಲರಿಗೂ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪಾಲಿಸಬೇಕಾದ ಉಡುಪು ನಿಯಮಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ’ ಎಂದು ಕೆಇಎ ನ್ಯಾಯಪೀಠಕ್ಕೆ ವಿವರಿಸಿದೆ.

ಅರ್ಜಿದಾರರ ಪರ ಹೈಕೋರ್ಟ್‌ ವಕೀಲರಾದ ಅಶ್ವಿನಿ ಎನ್‌.ರವೀಂದ್ರ ಮತ್ತು ಸುಮನಾ ನಾಗಾನಂದ ಹಾಗೂ ರಾಜ್ಯ ಸರ್ಕಾರದ ಪರ ಪ್ರಮೋದಿನಿ ಕಿಶನ್‌ ಮತ್ತು ಕೆಇಎ ಪರ ಎನ್‌.ಕೆ.ರಮೇಶ್‌ ವಾದ ಮಂಡಿಸಿದ್ದರು.

261117-4-1439809720