ಬೆಂಗಳೂರು: ‘ಮಕ್ಕಳಲ್ಲಿ ಕೆಟ್ಟ ವಿಚಾರಗಳನ್ನು ಬಿತ್ತುವುದೇ ಬಿಜೆಪಿ ನಾಯಕರ ಚಾಳಿ’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು.
ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ದ್ವೇಷದ ಭಾಷಣ ಮಾಡಿದ್ದಾರೆ. ಜನಪ್ರತಿನಿಧಿಯಾಗಿ ಮಕ್ಕಳ ಮುಂದೆ ಏನು ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವೂ ಅವರಿಗೆ ಇಲ್ಲ’ ಎಂದು ದೂರಿದರು.
‘ಬಿಜೆಪಿ ನಾಯಕರು ರಾಜಕೀಯಕ್ಕಾಗಿ ದೇವಸ್ಥಾನಗಳನ್ನು ಬಳಸಿಕೊಳ್ಳುತ್ತಿದ್ದರು. ಈಗ ಶಾಲೆಗಳಿಗೂ ನೇರವಾಗಿ ಪ್ರವೇಶಿಸುತ್ತಿದ್ದಾರೆ. ಜನರು ಇಂತಹ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಘಟನೆ ಕುರಿತು ವರದಿ ನೀಡಲು, ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ. ಅವರು ಕ್ಷಮೆ ಕೇಳಲಿ, ಬಿಡಲಿ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಅದಾನಿಗೆ ವಿಮಾನ ನಿಲ್ದಾಣ: ಟೀಕೆ
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಅಂಬಾನಿ, ಅದಾನಿ ಅವರಿಗೆ ಮಾರಾಟ ಮಾಡಲು ಬಿಜೆಪಿ ಮುಂದಾಗಿದೆ. ಅದಕ್ಕಾಗಿ ನಿಲ್ದಾಣವನ್ನು ಮುಚ್ಚುವ ಹಂತಕ್ಕೆ ತಂದಿದೆ ಎಂದು ಮಧು ಬಂಗಾರಪ್ಪ ದೂರಿದರು.
‘ನಿಲ್ದಾಣಕ್ಕೆ ರಾಜ್ಯ ಸರ್ಕಾರ ₹600 ಕೋಟಿ ವೆಚ್ಚ ಮಾಡಿದೆ. ಪ್ರಧಾನಿ ಮೋದಿ ಅವರು ಉದ್ಘಾಟಿಸಿ ಪ್ರಚಾರ ಪಡೆದುಕೊಂಡರು. ಆದರೆ, ಹಲವು ತಿಂಗಳು ವಿಮಾನ ಹಾರಾಟವೇ ಇರಲಿಲ್ಲ. ರಾಜ್ಯದ ಪ್ರಯತ್ನದ ಫಲವಾಗಿ ವಿಮಾನ ಸಂಚಾರ ಆರಂಭವಾಗಿತ್ತು. ಈಗ ಕೇಂದ್ರದ ಉಡಾನ್ ಯೋಜನೆ ಸ್ಥಗಿತದ ಮಾಡಿದ್ದರಿಂದ ಹಾರಾಟದಲ್ಲಿ ವ್ಯತ್ಯಯವಾಗಿದೆ ’ ಎಂದರು.
‘ಮೂಲಸೌಕರ್ಯ ಸಚಿವ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಚರ್ಚಿಸಿದ್ದೇನೆ. ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗುವುದು’ ಎಂದು ಹೇಳಿದರು.
261117-51-1700547248

