ಬೆಂಗಳೂರು, ನವೆಂಬರ್ 17: ರಾಜ್ಯದಲ್ಲಿ ಸದ್ಯ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲೂ ಬಹುತೇಕ ಜಿಲ್ಲೆಗಳಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಸದ್ಯಕ್ಕೆ ಯಾವ ಜಿಲ್ಲೆಗೂ ಮಳೆಯ ಮುನ್ಸೂಚನೆ ಇಲ್ಲ. ಆದರೆ ನವೆಂಬರ್ 20ರಂದು ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಬಹುದು. ಉತ್ತರ ಒಳನಾಡಿನ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಸೇರಿದಂತೆ ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ ಇಳಿಕೆ ಸಾಧ್ಯತೆ

ಇನ್ನು ರಾಜ್ಯದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ದಾವಣಗೆರೆಯಲ್ಲಿ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ