ಸೋಲಾಪುರ: ಪ್ರಸಕ್ತ ಹಂಗಾಮಿನಲ್ಲಿ ಕಟಾವು ಮಾಡಲಿರುವ ಕಬ್ಬಿಗೆ ಪ್ರತಿ ಟನ್ಗೆ ಮೊದಲ ಕಂತಾಗಿ ₹3,500 ಘೋಷಿಸಬೇಕೆಂದು ಆಗ್ರಹಿಸಿ ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸೋಲಾಪುರ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ಸಭೆಯನ್ನು ಇದೇ 19ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಅಭಿಜಿತ್ ಪಾಟೀಲ ಅವರು ಸ್ವಾಭಿಮಾನಿ ಶೇತ್ಕರಿ ಸಂಘಟನೆಯ ಜಿಲ್ಲಾಧ್ಯಕ್ಷ ವಿಜಯ ಗಣಪತದೇವ ಅವರಿಗೆ ಪತ್ರ ಬರೆದಿದ್ದಾರೆ. ರೈತ ಸಂಘಟನೆಯು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪ್ರತಿ ಟನ್ ಕಬ್ಬಿಗೆ ₹3,500 ಮೊದಲ ಕಂತು ಘೋಷಿಸುವ ಬೇಡಿಕೆ ಕುರಿತು ಚರ್ಚಿಸಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೆ ಕಬ್ಬು ಕಟಾವು ಸ್ಥಗಿತ ಚಳವಳಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಕೋರಿದ್ದಾರೆ.
ಸಭೆಗೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ವೈಯಕ್ತಿಕವಾಗಿ ಹಾಜರಾಗುವುದು ಕಡ್ಡಾಯ. ಅಧ್ಯಕ್ಷರ ಬದಲಿಗೆ ಯಾವುದೇ ಪ್ರತಿನಿಧಿ ಅಥವಾ ವ್ಯವಸ್ಥಾಪಕ ನಿರ್ದೇಶಕರನ್ನು ಸಭೆಗೆ ಕಳುಹಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ರೈತ ಸಂಘಟನೆಗಳ ಬೇಡಿಕೆಗೆ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ನವೆಂಬರ್ 18ರಂದು ಬೆಳಿಗ್ಗೆ 10 ಗಂಟೆಯೊಳಗೆ ಈಗಾಗಲೇ ಕಟಾವು ಮಾಡಿರುವ ಕಬ್ಬನ್ನು ಅರೆಯುವಂತೆ ಸೂಚಿಸಲಾಗಿದೆ. ನವೆಂಬರ್ 19ರವರೆಗೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವನ್ನು ಸ್ಥಗಿತಗೊಳಿಸಬೇಕು ಎಂದು ಪತ್ರದಲ್ಲಿ ನಿರ್ದೇಶಿಸಲಾಗಿದೆ.
261118-26-1930773564

