ಬೆಂಗಳೂರು, ನವೆಂಬರ್ 19: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಬಹುಕಾಲದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ಮುಂದುವರಿಸಿದ್ದಾರೆ. ₹15,000 ಗೌರವಧನ ನೀಡುವಂತೆ ಸರ್ಕಾರವನ್ನು ಆಗ್ರಹಿಸಿ ಎರಡನೇ ದಿನವೂ ಹೋರಾಟ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ತೀವ್ರ ಚಳಿಯ ನಡುವೆಯೂ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ನಲ್ಲಿ ಮಲಗಿ ಪ್ರತಿಭಟಿಸಿದ್ದು, ಸಣ್ಣ ಮಕ್ಕಳನ್ನು ಕರೆದುಕೊಂಡು ಬಂದಿದ್ದ ಮಹಿಳೆಯರೂ ಸೇರಿದಂತೆ ಹಲವರು ಹೋರಾಟದಲ್ಲಿ ಭಾಗವಹಿಸಿದ್ದಾರೆ. ಬೇಡಿಕೆಗಳು ಈಡೇರುವ ತನಕ, ವಿಶೇಷವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು ಆದೇಶ ಪತ್ರ ಕೈ ಸೇರುವ ತನಕ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರೂ, ಕಾರ್ಯಕರ್ತೆಯರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಕೊರೊನಾ ಸಮಯದಲ್ಲಿ ಮುಂಚೂಣಿ ಕಾರ್ಯಕರ್ತೆಯರಾಗಿ ಕೆಲಸ ಮಾಡಿದಾಗ ಸರ್ಕಾರಕ್ಕೆ ನಮ್ಮ ನೆನಪಾಯಿತು, ಆದರೆ ಈಗ ಸಂಬಳ ಹೆಚ್ಚಿಸುವ ವಿಷಯದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಆಶಾ ಕಾರ್ಯಕರ್ತೆಯರು ಅಳಲು ತೋಡಿಕೊಂಡಿದ್ದಾರೆ. ಸರ್ಕಾರವು ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

