ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮದ ಆರೋಪದಡಿ ಎಸ್ಐಟಿ ವಶದಲ್ಲಿರುವ ಕೆಪಿಎಸ್‌ಸಿ ಸದಸ್ಯೆ ಬಿ.ವಿ.ಗೀತಾ ಅವರನ್ನು ಅಮಾನತು ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸರ್ಕಾರ ನಿರ್ಧರಿಸಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆಯಿತು. ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಆರೋಪದಲ್ಲಿ ಅವರನ್ನು ಅಮಾನತುಗೊಳಿಸುವ ಜತೆಗೆ, ವಿಚಾರಣೆ ನಡೆಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಭೆ ತೀರ್ಮಾನಿಸಿತು.

ಸಂಪುಟ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಈ ವಿಷಯ ತಿಳಿಸಿದರು.

ಎಸ್‌ಐಟಿ ದಾಳಿ: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸದಾಶಿವನಗರದಲ್ಲಿರುವ ಗೀತಾ ಅವರ ಇರುವ ಮನೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಿ, ಕೆಲವು ದಾಖಲೆಗಳನ್ನು ಜಪ್ತಿ ಮಾಡಿದೆ. ಅಲ್ಲದೇ ಸ್ಥಳ ಮಹಜರು ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಅಭ್ಯರ್ಥಿ ನಂದೀಶ್ ಅವರಿಂದ ಗೀತಾ ₹20 ಲಕ್ಷ ಪಡೆದಿದ್ದರು ಎಂಬ ಆರೋಪವಿದೆ. ರಾಜಮಹಲ್ ವಿಲಾಸ್ ಕ್ಲಬ್ ಸಮೀಪ ತಮ್ಮದೇ ಕಾರಿನಲ್ಲಿ ತೆರಳಿ ಹಣ ಪಡೆದಿದ್ದಾರೆ ಎಂಬ ಮಾಹಿತಿ ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಪತ್ತೆ ಆಗಿತ್ತು ಎಂದು ಮೂಲಗಳು ಹೇಳಿವೆ.

261120-51-1125928848