ಬೆಂಗಳೂರು: ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳು ವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.

‘ವಾರ್ಡ್ ಒನ್’ ಅಭಿಯಾನಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ನಗರವು ಸುಂದರವಾಗಿ ಕಾಣಬೇಕಾದರೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜೆಟ್ಟಿಂಗ್ ಯಂತ್ರಗಳನ್ನು ಬಳಸಿ ಜಂಕ್ಷನ್‌ಗಳು, ರಸ್ತೆ ಬದಿಯ ಗೋಡೆಗಳು, ಪಾದಚಾರಿ ಮಾರ್ಗಗಳು, ಬಸ್ ತಂಗುದಾಣಗಳು ಹಾಗೂ ಮೇಲ್ಸೇತುವೆಗಳ ಪಿಲ್ಲರ್‌ಗಳನ್ನು ಪ್ರೆಶರ್ ವಾಷ್ ಮೂಲಕ ಸ್ವಚ್ಛಗೊಳಿಸಿ, ನಗರದ ಸೌಂದರ್ಯವನ್ನು ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಿದರು.

ಜೆಟ್ಟಿಂಗ್ ಯಂತ್ರಗಳ ಮೂಲಕ ರಸ್ತೆಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳಬೇಕು. ಈ ಸಂಬಂಧ ಸಮೀಪದಲ್ಲಿರುವ ಸಂಸ್ಕರಣಾ ಘಟಕಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಸ್ವಚ್ಛತಾ ಕಾರ್ಯವನ್ನು ಕೂಡಲೇ ಆರಂಭಿಸುವಂತೆ ಸೂಚನೆ ನೀಡಿದರು.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋಣನಕುಂಟೆ ಕ್ರಾಸ್‌ನ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು ಪರಿಶೀಲಿಸಿ, ಮೆಟ್ರೊ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಜಂಕ್ಷನ್‌ನಲ್ಲಿರುವ ಐಲ್ಯಾಂಡ್ ಅಭಿವೃದ್ಧಿಪಡಿಸುವುದರ ಜೊತೆಗೆ ಪಾದಚಾರಿ ಮಾರ್ಗವನ್ನು ಅಭಿವೃದ್ಧಿ ಪಡಿಸಬೇಕು. ಸಂಚಾರ ದಟ್ಟಣೆ ನಿವಾರಿಸಲು ಲೇನ್ ಮಾರ್ಕಿಂಗ್ ಹಾಗೂ ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸುವ ಕುರಿತು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

261120-4-77730962