ಬೆಂಗಳೂರು: ರಾಜ್ಯದ 30 ಜಿಲ್ಲಾ ಪಂಚಾಯಿತಿಗಳ 1,101 ಕ್ಷೇತ್ರಗಳು ಹಾಗೂ 234 ತಾಲ್ಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳ ಮೀಸಲಾತಿಯ ಅಂತಿಮ ಅಧಿಸೂಚನೆಯನ್ನು ನ.20ರಂದು ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
‘ಅ.9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು. 19ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. 2,900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಆಕ್ಷೇಪಣೆಗಳನ್ನೂ ಪರಿಶೀಲಿಸಿ, ಸಣ್ಣಪುಟ್ಟ ಬದಲಾವಣೆಗಳೊಂದಿಗೆ ಮೀಸಲು ನಿಗದಿಯ ಅಂತಿಮ ಪಟ್ಟಿ ಸಿದ್ಧಪಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2016ರ ಏಪ್ರಿಲ್ನಲ್ಲಿ ಚುನಾವಣೆ ನಡೆದಿತ್ತು. ಅಂದು ಆಯ್ಕೆಯಾಗಿದ್ದ ಸದಸ್ಯರ ಅವಧಿ 2021ರ ಏಪ್ರಿಲ್ 27ರಂದು ಮುಕ್ತಾಯವಾಗಿತ್ತು. ಐದೂವರೆ ವರ್ಷಗಳಿಂದ ಚುನಾವಣೆ ನಡೆದಿಲ್ಲ. ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳಿಗೆ 2020–21ರಲ್ಲಿ ಚುನಾವಣೆ ನಡೆಸಲಾಗಿತ್ತು. ಅವುಗಳ ಅವಧಿಯು ಮುಕ್ತಾಯವಾಗಿ ಎರಡನೇ ಅವಧಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
31 ಜಿಲ್ಲೆಗಳ ಪೈಕಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿ ಅಧಿಸೂಚನೆಯಲ್ಲಿ ಇಲ್ಲ ಎಂದು ಮೂಲಗಳು ಹೇಳಿವೆ.
261120-51-305534560

