ಬೆಂಗಳೂರು, (ಅಕ್ಟೋಬರ್ 30): ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣದ ಉದ್ದೇಶದಿಂದ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದೆ. ಸುಪ್ರೀಂಕೋರ್ಟ್​ ಗೈಡ್​​ಲೈನ್ಸ್​​ ಪಾಲನೆ ಮಾಡಬೇಕು. ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್‌‍ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಗೋದಾಮುಗಳನ್ನು ಪರಿಶೀಲನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ