ಬೆಂಗಳೂರು, ನವೆಂಬರ್ 21: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಐದು ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ 15 ಸಾವಿರ ರೂಪಾಯಿ ಗೌರವಧನ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ನೀಡಬೇಕು. ಬೇಡಿಕೆ ಈಡೇರುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಐದು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ತಮ್ಮ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲವೇ ಎಂದು ಪ್ರಶ್ನಿಸಿರುವ ಅವರು, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವುದಿರಲಿ, ಸೌಜನ್ಯಕ್ಕಾದರೂ ನಮ್ಮ ಕಡೆ ತಿರುಗಿ ನೋಡಿಲ್ಲ ಎಂದು ಆರೋಪಿಸಿದ್ದಾರೆ.
ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿ ನಮ್ಮ ಹೋರಾಟಕ್ಕಿದೆ: ಆಶಾ ಕಾರ್ಯಕರ್ತೆಯರ ಖಡಕ್ ನುಡಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಲ್ಲುಬಂಡೆಯಂತಿರಬಹುದು. ಆದರೆ ನಮ್ಮ ಹೋರಾಟಕ್ಕೆ ಆ ಕಲ್ಲುಬಂಡೆಯನ್ನೂ ಕರಗಿಸುವ ಶಕ್ತಿಯಿದೆ. ನಮ್ಮ ಹೋರಾಟ ಆ ಕಲ್ಲುಬಂಡೆಯನ್ನು ಕೆತ್ತಿ ಮೂರ್ತಿಯನ್ನಾಗಿ ಮಾಡುತ್ತದೆ. ಮುಖ್ಯಮಂತ್ರಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಜನರ ಮೆಚ್ಚುಗೆಗೆ ಪಾತ್ರರಾಗಬೇಕು. ಇಲ್ಲವಾದರೆ ಹೋರಾಟ ಮುಂದುವರಿಯಲಿದೆ ಎಂದು ಆಶಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.
LIVE TV
ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಯಾಕಾಗಿ?
15 ಸಾವಿರ ರೂಪಾಯಿ ಗೌರವಧನ ನೀಡುವಂತೆ ಹಾಗೂ ಇತರ ಕೆಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ ಸರ್ಕಾರದ ಆದೇಶದ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

