ಬೆಂಗಳೂರು, ನವೆಂಬರ್ 21: ಕರ್ನಾಟಕದಾದ್ಯಂತ ಒಣಹವೆ ಮುಂದುವರಿದಿದ್ದು, ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಅದರಲ್ಲೂ ದಾವಣಗೆರೆಯಲ್ಲಿ ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ. ಇಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ. ಮುಂದಿನ ಎರಡು ದಿನ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ಬಳಿಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ರಾತ್ರಿ ವೇಳೆ ಹೆಚ್ಚಲಿದೆ ಚಳಿ
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ. ಒಟ್ಟಾರೆ ರಾಜ್ಯದಲ್ಲಿ ಸದ್ಯಕ್ಕೆ ಮಳೆಯ ಲಕ್ಷಣಗಳಿಲ್ಲದಿದ್ದರೂ, ಬೆಳಗಿನ ಮತ್ತು ರಾತ್ರಿ ವೇಳೆ ಚಳಿಯ ಅನುಭವ ಹೆಚ್ಚಾಗುವ ಸಾಧ್ಯತೆಯಿದೆ.
ನವೆಂಬರ್ 23 ರಿಂದ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ
ನವೆಂಬರ್ 23ರಂದು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ. ನವೆಂಬರ್ 24ರಿಂದ 26ರವರೆಗೆ ರಾಜ್ಯದಾದ್ಯಂತ ಒಂದೆರಡು ಕಡೆ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

