ಬೆಂಗಳೂರು, ನವೆಂಬರ್ 25: ಕೆಪಿಎಸ್​ಸಿ ನೇಮಕಾತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಪಡೆದುಕೊಂಡಿದ್ದ ಕನ್ನಾಳೆ, ಚಿಕಿತ್ಸೆಯ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜೈಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ವಿಕ್ಟೋರಿಯಾ ಆಸ್ಪತ್ರೆಯಿಂದ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಮಂಡಿ ನೋವಿನ ನೆಪದಲ್ಲಿ ಆಸ್ಪತ್ರೆ ಸೇರಿದ್ದ ಕನ್ನಾಳೆ

ಕೆಪಿಎಸ್​ಸಿ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಕನ್ನಾಳೆ, ಮಂಡಿ ನೋವು ತೀವ್ರವಾಗಿದ್ದು ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ತಮ್ಮ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಕೊಡಿಸುವಂತೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಕನ್ನಾಳೆ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, 48 ಗಂಟೆಗಳ ಒಳಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬಸವರಾಜ್ ಕನ್ನಾಳೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವಿಚಾರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಮತ್ತೆ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಚಿಕಿತ್ಸೆ ಪಡೆಯುವ ಸಂಬಂಧ ಕನ್ನಾಳೆ ಸುಳ್ಳು ಮಾಹಿತಿ ನೀಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಜೈಲಾಧಿಕಾರಿಗಳು ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಪರಿಗಣಿಸಿದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ವಾಪಸ್ ಜೈಲಿಗೆ ಕರೆತರುವಂತೆ ಸೂಚನೆ ನೀಡಲಾಗಿದೆ. ಅದರಂತೆ ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಿಂದ ಬಸವರಾಜ್ ಕನ್ನಾಳೆಯನ್ನು ಬಿಡುಗಡೆಗೊಳಿಸಿ ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ.

ಇನ್ನು ಕೆಪಿಎಸ್​ಸಿ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿ ಹಾಗೂ ಮಧ್ಯವರ್ತಿಯಾಗಿ ಗುರುತಿಸಿಕೊಂಡಿರುವ ಬಸವರಾಜ್ ಕನ್ನಾಳೆ ವಿರುದ್ಧ ತನಿಖೆ ಮುಂದುವರಿದಿದೆ. ಜಾರಿ ನಿರ್ದೇಶನಾಲಯ (ED) ಮತ್ತು ವಿಶೇಷ ತನಿಖಾ ತಂಡ (SIT) ಪ್ರಕರಣದ ತನಿಖೆ ನಡೆಸುತ್ತಿವೆ. ಈಗಾಗಲೇ ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಿದೆ. KPSCಯಲ್ಲಿ ನಡೆದಿರುವ ವಿವಿಧ ಪರೀಕ್ಷೆಗಳ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಹೀಗಾಗಿ ನೇಮಕಾತಿ ಹಗರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ