ಚಿಕ್ಕಮಗಳೂರು, ನವೆಂಬರ್ 25: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ‘ಆಪರೇಷನ್ ಗಜ’ ಕಾರ್ಯಾಚರಣೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಮೂಡಿಗೆರೆ ಬಂದ್ಗೆ ಕರೆ ನೀಡಲಾಗಿದೆ. ಹಾಸನದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಾಡಾನೆಗಳನ್ನು ಸ್ಥಳಾಂತರ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ರೋಶ ಭುಗಿಲೆದ್ದಿದೆ. ತತ್ಕೋಳ ಅರಣ್ಯದ ಮೂಲಕ ಕಾಡಾನೆಗಳ ಸ್ಥಳಾಂತರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇಂದು (ನವೆಂಬರ್ 25) ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮೂಡಿಗೆರೆ ಬಂದ್ ಇರಲಿದ್ದು, ಹಲವು ಖಾಸಗಿ ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಆಟೋ, ಟ್ಯಾಕ್ಸಿ ಚಾಲಕರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದರೆ, ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ. ಸ್ವಯಂಪ್ರೇರಿತರಾಗಿ ಎಲ್ಲರೂ ಈ ಬಂದ್ಗೆ ಬೆಂಬಲ ನೀಡುತ್ತಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಪಕ್ಷಾತೀತವಾಗಿಯೂ ಈ ಬಂದ್ಗೆ ಬೆಂಬಲ ವ್ಯಕ್ತವಾಗಿದ್ದು, ಕಾಡಾನೆಗಳ ಸ್ಥಳಾಂತರದಿಂದ ಅವುಗಳು ಜನರ ಓಡಾಟದ ಪ್ರದೇಶಗಳಿಗೆ ಬಂದು ಹಾನಿಯಾಗುವ ಸಾಧ್ಯತೆಯ ಬಗ್ಗೆ ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

