ಬೆಂಗಳೂರು: ‘ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇರುವುದು ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿಯೇ ವಿನಾ ಉಳ್ಳವರಿಗಾಗಿ ಅಲ್ಲ. ಯಾವುದೇ ಧರ್ಮ ಸಂವಿಧಾನಕ್ಕೆ ರಕ್ಷಣೆ ನೀಡುವುದಿಲ್ಲ. ಆದರೆ, ಸಂವಿಧಾನ ಎಲ್ಲ ಧರ್ಮಗಳಿಗೂ ರಕ್ಷಣೆ ನೀಡುತ್ತದೆ. ಇದೇ ಭಾರತೀಯ ಸಂವಿಧಾನದ ಶ್ರೇಷ್ಠತೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೊ ಸಭಾಂಗಣದಲ್ಲಿ ಕೆಪಿಸಿಸಿ ಕಾನೂನು ಘಟಕದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆ ಹಾಗೂ ‘ಸಂವಿಧಾನ ಮತ್ತು ಪ್ರಸ್ತುತ ರಾಜಕಾರಣ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
‘ಅಂಬೇಡ್ಕರ್ ಅವರಿಗೆ ಸಂವಿಧಾನ ರಚಿಸಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂಬ ಸುಳ್ಳುಗಳನ್ನು ಸಂಘ ಪರಿವಾರದವರು ಹರಡುತ್ತಿದ್ದಾರೆ. ಪರೋಕ್ಷವಾಗಿ ಸಂವಿಧಾನವನ್ನು ಟೀಕಿಸುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನವೆಂದರೆ ಕೇವಲ ಮೀಸಲಾತಿ ಎಂಬಂತೆ ಬಿಂಬಿಸುತ್ತಿದ್ದಾರೆ. ಮೀಸಲಾತಿ ಎನ್ನುವುದು ಬಡತನ ನಿರ್ಮೂಲನೆಯ ಕಾರ್ಯಕ್ರಮವಲ್ಲ. ಶತಮಾನಗಳಿಂದ ಸಾಮಾಜಿಕವಾಗಿ ಶೋಷಣೆಗೆ ಒಳಗಾದ ಹಾಗೂ ಅವಕಾಶಗಳಿಂದ ವಂಚಿತರಾದ ಸಮುದಾಯಗಳಿಗೆ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯ ಒದಗಿಸುವ ವ್ಯವಸ್ಥೆ’ ಎಂದರು.
‘ಅಂಬೇಡ್ಕರ್ ಅವರು ಕಾಂಗ್ರೆಸ್ ವಿರುದ್ಧ ರಾಜೀನಾಮೆ ನೀಡಿ ಕೇಂದ್ರ ಸಚಿವ ಸಂಪುಟದಿಂದ ಹೊರನಡೆದರು ಎಂಬ ತಪ್ಪು ಮಾಹಿತಿಯನ್ನು ಆರ್ಎಸ್ಎಸ್ ಹರಡುತ್ತಿದೆ. ಅಂಬೇಡ್ಕರ್ ಅವರು ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು, ವಿವಾಹ ವಿಚ್ಛೇದನದ ಹಕ್ಕು ಸೇರಿದಂತೆ ಹಲವು ಮಹತ್ವದ ಹಕ್ಕುಗಳನ್ನು ಕಲ್ಪಿಸಲು ಮುಂದಾಗಿದ್ದರು. ಪಂಡಿತ್ ಜವಾಹರಲಾಲ್ ನೆಹರೂ ಅವರು ಈ ಪ್ರಯತ್ನಕ್ಕೆ ಬೆಂಬಲ ನೀಡಿದ್ದರು’ ಎಂದರು.
‘ಯುವಜನರಲ್ಲಿ ಜನಾಭಿಪ್ರಾಯವನ್ನು ಬದಲಾಯಿಸುವ ಶಕ್ತಿಯಿದೆ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಹಾಗೂ ಸರ್ಕಾರಗಳನ್ನು ಉತ್ತರದಾಯಿಗಳನ್ನಾಗಿ ಮಾಡುವ ಸಾಮರ್ಥ್ಯ ಯುವಪೀಳಿಗೆಗಿದೆ. ಈ ಶಕ್ತಿಯನ್ನು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗೆ ಬಳಸಿಕೊಳ್ಳಬೇಕು. ಸಂವಿಧಾನದ ಪ್ರತಿಯೊಂದು ವಿಧಿಯನ್ನೂ ಕಾನೂನು ವಿದ್ಯಾರ್ಥಿಗಳು ಅಧ್ಯಯನ ಮಾಡಿ, ತಮ್ಮ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ಸಂವಿಧಾನದ ಆಶಯಗಳನ್ನು ಉಳಿಸಿ, ಪ್ರಜಾಪ್ರಭುತ್ವವನ್ನು ಬಲಪಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಹರಿಪ್ರಸಾದ್ ಹೇಳಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕ ಮಂಜುನಾಥ್ ಭಂಡಾರಿ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ. ಧನಂಜಯ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಮತ್ತಿತರರು ಇದ್ದರು.
261126-4-1222328844

