ಚಾಮರಾಜನಗರ, ನವೆಂಬರ್ 27: ಚಾಮರಾಜನಗರ ಜಿಲ್ಲಾಸ್ಪತ್ರೆ ಹಾಗೂ ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೇವೆ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದು, ರೋಗಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಅತ್ಯಾಧುನಿಕ ಅಲ್ಟ್ರಾಸೌಂಡ್ ಯಂತ್ರಗಳಿದ್ದರೂ, ಅವುಗಳನ್ನು ನಿರ್ವಹಿಸಲು ಆಪರೇಟರ್‌ಗಳ ಕೊರತೆಯು ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ.

ಸರ್ಕಾರಿ ಅಧಿಕಾರಿಗಳು ಖಾಸಗಿ ಲ್ಯಾಬ್‌ಗಳೊಂದಿಗೆ ಶಾಮೀಲಾಗಿ, ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತೆ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಸ್ಕ್ಯಾನಿಂಗ್ ಸೆಂಟರ್‌ಗೆ ಬೇಕೆಂದೇ ಬೀಗ ಜಡಿದು, ಜನರಿಗೆ ಸರ್ಕಾರಿ ಸೌಲಭ್ಯ ಸಿಗದಂತೆ ಮಾಡಲಾಗುತ್ತಿದೆ ಎಂದೂ ದೂರಲಾಗಿದೆ. ಈ ಕಾರಣದಿಂದ ಬಡ ರೋಗಿಗಳು ಹೆಚ್ಚಿನ ಹಣ ಪಾವತಿಸಿ ಖಾಸಗಿ ಲ್ಯಾಬ್‌ಗಳಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಈ ಸಮಸ್ಯೆಯ ಕುರಿತು ಚಾಮರಾಜನಗರ ಮೆಡಿಕಲ್ ಕಾಲೇಜಿನ ಡೀನ್ ದೇವಕಿ ರಂಗಸ್ವಾಮಿ ಅವರನ್ನು ಸಂಪರ್ಕಿಸಲು ಹಲವು ಪ್ರಯತ್ನಗಳನ್ನು ಮಾಡಿದರೂ, ಅವರು ಲಭ್ಯವಾಗಿಲ್ಲ. ಅವರ ಈ ನಿರ್ಲಕ್ಷ್ಯದ ನಡವಳಿಕೆಯು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ, ಸ್ಕ್ಯಾನಿಂಗ್ ಸೇವೆ ಪುನರಾರಂಭಿಸಿ, ರೋಗಿಗಳ ಸಂಕಷ್ಟವನ್ನು ನಿವಾರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ